Blog

  • *ಯುವಕರು ಕಲಿಕೆ ಜೊತೆಗೆ ಪಠ್ಯೇತರ ಚಟುವಟಿಕೆಗಳಿಗೂ ಸಮಯ ಮೀಸಲಿಡಿ – ಜೆ. ರಾಜೇಂದ್ರ*

    ದೊಡ್ಡಬಳ್ಳಾಪುರ: ಯುವಕರು ಪಠ್ಯದ ಜೊತೆಗೆ ಪಠ್ಯೇತರ ಚಟುಟಿಕೆಗಳಾದ ಕ್ರೀಡೆ, ಸಂಗೀತ, ನೃತ್ಯ, ಸಾಂಸ್ಕೃತಿಕ ಕಾರ್ಯಕ್ರಮಗಳ ಕಲಿಕೆಗೂ ಸ್ವಲ್ಪ ಸಮಯ ಮೀಸಲಿಡಿ ಎಂದು ಶ್ರೀ ದೇವರಾಜ ಅರಸ್ ಎಜುಕೇಶನಲ್ ಟ್ರಸ್ಟ್ ನ ಉಪಾಧ್ಯಕ್ಷರಾದ ಜೆ. ರಾಜೇಂದ್ರ ತಿಳಿಸಿದರು.

    ಶ್ರೀ ದೇವರಾಜ ಅರಸ್ ಅಂತರಾಷ್ಟ್ರೀಯ ವಸತಿ ಪ್ರೌಢಶಾಲಾ ವಿಭಾಗದಲ್ಲಿ ನೂತನ ವಿದ್ಯಾರ್ಥಿಗಳಿಗೆ ಸ್ವಾಗತ ಸಮಾರಂಭ ನಡೆಯಿತು.

     

    ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು ಅಂಕಗಳ ಆಧಾರದಲ್ಲಿ ವಿದ್ಯಾರ್ಥಿಗಳ ಸಾಮರ್ಥ್ಯ, ಶಿಕ್ಷಣವನ್ನು ಅಳೆಯುವ ಕಾಲ ಬದಲಾಗಿದೆ. ಆಧುನಿಕ ಕಾಲದಲ್ಲಿ ಯುವಕರ ಶಿಕ್ಷಣ ಮಟ್ಟವನ್ನು ನಿರ್ಧರಿಸುವುದು ಕೌಶಲ್ಯ, ಸಾಮಾನ್ಯ ಜ್ಞಾನಗಳ ಮೇಲೆ, ವಿದ್ಯಾರ್ಥಿಗಳು ಪಠ್ಯ ಚಟುವಟಿಕೆಗಳ ಜೊತೆಗೆ ಪಠ್ಯೇತರ ಚಟುವಟಿಕೆಗಳಲ್ಲಿ ತೊಡಗಿಕೊಳ್ಳಬೇಕು, ಸ್ಪರ್ಧಾತ್ಮಕ ಯುಗದಲ್ಲಿ ವಿದ್ಯಾರ್ಥಿಗಳು ಸುಲಭವಾಗಿ ಸ್ಪರ್ಧಿಸಲು ಕೌಶಲ್ಯಗಳು ಬಹಳ ಮುಖ್ಯ ಎಂದರು.

     

    ಶಾಲೆಯ ಮುಖ್ಯೋಪಾಧ್ಯಾಯರಾದ ಜಿಯಾವುಲ್ಲಾಖಾನ್ ಅಧ್ಯಕ್ಷತೆ ವಹಿಸಿ ಮಾತನಾಡಿದರು ಯಾವುದಕ್ಕೂ ಹಿಂಜರಿಯದೆ ಸಾಧನೆಗೆ ವಿದ್ಯಾರ್ಥಿಗಳು ಹೆಚ್ಚು ಶ್ರಮವಹಿಸಬೇಕು ಶಾಲೆಯಲ್ಲಿ ವಿದ್ಯಾಭ್ಯಾಸಕ್ಕೆ ಮತ್ತು ಸಾಧನೆಗೆ ಎಲ್ಲಾ ತರಹದ ಸಹಕಾರವಿದ್ದು, ವಿದ್ಯಾರ್ಥಿಗಳು  ಸದ್ಬಳಕೆ ಮಾಡಿಕೊಳ್ಳಬೇಕು ಎಂದರು.

     

    ಶ್ರೀ ದೇವರಾಜ ಅರಸ್ ಪ್ರಥಮ ದರ್ಜೆ ಪದವಿ ಸಂಜೆ ಕಾಲೇಜಿನ ಪ್ರಾಂಶುಪಾಲ ಡಾ. ಎಂ ಚಿಕ್ಕಣ್ಣ, ಶ್ರೀ ದೇವರಾಜ ಅರಸ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಮಾಂತೇಶಪ್ಪ,, ದೈಹಿಕ ಶಿಕ್ಷಣ ನಿರ್ದೇಶಕರಾದ ವಿ ಶ್ರೀನಿವಾಸ್, ಶಿಕ್ಷಕರಾದ ವಿಜಯಕುಮಾರ್, ಮಹಮ್ಮದ್ ಕೈಸರ್ ಪಾಷಾ, ದೇವರಾಜ್ ಮತ್ತಿತರರು ಕಾರ್ಯಕ್ರಮದಲ್ಲಿ ಹಾಜರಿದ್ದರು.

  • *ಹವಾಮಾನ ಆಧಾರಿತ ಬೆಳೆ ವಿಮೆಗೆ ನೊಂದಾಯಿಸಿ*

    ಬೆಂಗಳೂರು ಗ್ರಾಮಾಂತರ ಜಿಲ್ಲೆ,ವಿಜಯಮಿತ್ರ :- 2024-25ನೇ ಸಾಲಿನ ಮುಂಗಾರು ಹಂಗಾಮಿನ ಮರು ವಿನ್ಯಾಸಗೊಳಿಸಲಾದ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆ (RWBCIS)ಯಡಿ ವಿವಿಧ ತೋಟಗಾರಿಕೆ ಬೆಳೆಗಳಿಗೆ ವಿಮೆ ಮಾಡಿಸ ಬಹುದಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಅಧೀನ ತಾಲ್ಲೂಕುಗಳಾದ ದೇವನಹಳ್ಳಿ, ದೊಡ್ಡಬಳ್ಳಾಪುರ, ಹೊಸಕೋಟೆ ಮತ್ತು ನೆಲಮಂಗಲ ತಾಲ್ಲೂಕುಗಳನ್ನು ವಿಮೆಯ ವ್ಯಾಪ್ತಿಗೆ ಒಳಪಡಿಸಲಾಗಿದೆ.

     

    ಹವಾಮಾನ ಅಂಶಗಳಾದ ತಾಪಮಾನ, ಗಾಳಿಯ ವೇಗ, ಮಳೆಯ ಪ್ರಮಾಣ, ಆರ್ದ್ರತೆ ಇತ್ಯಾದಿ ಮಾಹಿತಿಗಳನ್ನು ಸರ್ಕಾರದಿಂದ ಅಧಿಸೂಚಿತ ಟೆಲಿ ಮೆಟ್ರಿಕ್ ಮಳೆ ಮಾಪನ ಕೇಂದ್ರ ಮತ್ತು ಸ್ವಯಂಚಾಲಿತ ಹವಾಮಾನ ಕೇಂದ್ರಗಳಲ್ಲಿ ದಾಖಲಾಗುವ ಅಂಶಗಳ ಆಧಾರದ ಮೇಲೆ ಬೆಳೆ ವಿಮೆ ನಷ್ಟವನ್ನು ತೀರ್ಮಾನಿಸಲಾಗುತ್ತದೆ.

     

    ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿನ ದೊಡ್ಡಬಳ್ಳಾಪುರ, ದೇವನಹಳ್ಳಿ, ಹೊಸಕೋಟೆ ಮತ್ತು ನೆಲಮಂಗಲ ತಾಲ್ಲೂಕಿನ ಮಾವು ಬೆಳೆಯಲ್ಲಿ ಪ್ರತಿ ಹೆಕ್ಟೇರ್ ಗೆ ವಿಮಾ ಮೊತ್ತ-80,000ರೂ, ರೈತರು ಪಾವತಿಸಬೇಕಾದ ದರ (ಶೇ.5%)-4,000, ದ್ರಾಕ್ಷಿ ಬೆಳೆಯಲ್ಲಿ ಪ್ರತಿ ಹೆಕ್ಟೇರ್ ಗೆ ವಿಮಾ ಮೊತ್ತ-2,80,000ರೂ, ರೈತರು ಪಾವತಿಸಬೇಕಾದ ದರ (ಶೇ.5%ಗಳಲ್ಲಿ)-14,000 ಮಾವು ಮತ್ತು ದ್ರಾಕ್ಷಿ ಬೆಳೆಯುವ ರೈತ ಬಾಂಧವರು ಈ ಯೋಜನೆಯಡಿ ನೊಂದಾಯಿಸಿ ಉಪಯೋಗ ಪಡೆದುಕೊಳ್ಳುವುದು.

    ಬೆಳೆ ಸಾಲ ಪಡೆಯದ ರೈತರು ಯೋಜನೆಯಡಿ ಭಾಗವಹಿಸಲು ನಿಗಧಿತ ಅರ್ಜಿಯೊಂದಿಗೆ ಪ್ರಸಕ್ತ ಸಾಲಿನ ಪಹಣಿ / ಕಂದಾಯ ರಶೀದಿ / ಖಾತೆ ಪುಸ್ತಕ / ಬ್ಯಾಂಕ್ ಖಾತೆ ಪುಸ್ತಕ, ಆಧಾರ್ ನಕಲು ಪ್ರತಿ ಮತ್ತು ಸ್ವಯಂಘೋಷಿತ ಬೆಳೆ ವಿವರಗಳನ್ನು ಹತ್ತಿರದ ರಾಷ್ಟ್ರೀಯ ಅಧಿಕೃತ ಬ್ಯಾಂಕು / ಸಾಮಾನ್ಯ ಸೇವಾ ಕೇಂದ್ರ/ ಗ್ರಾಮ ಒನ್ ಕೇಂದ್ರಗಳಲ್ಲಿ ನೊಂದಾಯಿಸುವುದು.

     

    ವಿಮೆ ಮಾಡಿಸುವ ರೈತರು ಫ್ರೂಟ್ಸ್ ತಂತ್ರಾಂಶದ ನೋಂದಣಿ ಸಂಖ್ಯೆಯನ್ನು ಹೊಂದಿರಬೇಕಿದ್ದು, ನೋಂದಣಿ ಸಂಖ್ಯೆಗೆ ಪಹಣಿ ವಿವರಗಳನ್ನು ಜೋಡಿಸಬೇಕಿರುತ್ತದೆ. ನೋಂದಣಿ ಸಂಖ್ಯೆ ಇಲ್ಲದ ರೈತರು ನೋಂದಣಿ ಸಂಖ್ಯೆಯನ್ನು ಮಾಡಿಕೊಂಡು ವಿಮೆಯಲ್ಲಿ ಪಾಲ್ಗೊಳ್ಳಬೇಕಿರುತ್ತದೆ.

    ಬೆಳೆ ಸಾಲ ಪಡೆದ ರೈತರನ್ನು ಸಂಬಂಧಿಸಿದ ಬ್ಯಾಂಕಿನವರು ವಿಮೆ ವ್ಯಾಪ್ತಿಗೆ ನೊಂದಾಯಿಸಲಿದ್ದು, ಯೋಜನೆಯಲ್ಲಿ ನೊಂದಾಯಿಸಿಕೊಳ್ಳಲು ಇಚ್ಚಿಸದ ರೈತರು ಸಂಬಂಧಿಸಿದ ಬ್ಯಾಂಕ್ ಶಾಖೆಯ ವ್ಯವಸ್ಥಾಪಕರಿಗೆ ನೋಂದಣಿಯ ಅಂತಿಮ ದಿನಾಂಕಕ್ಕಿಂತ 7 ದಿನಗಳು ಮುಂಚಿತವಾಗಿ ಮುಚ್ಚಳಿಕೆ ಪತ್ರವನ್ನು ನೀಡಿದ್ದಲ್ಲಿ ಅಂತಹ ರೈತರನ್ನು ಯೋಜನೆಯಿಂದ ಕೈಬಿಡಲು ಅವಕಾಶವಿರುತ್ತದೆ.

     

    ಬೆಂಗಳೂರು ಗ್ರಾಮಾಂತರ ಜಿಲ್ಲೆಗೆ ಮರು ವಿನ್ಯಾಸಗೊಳಿಸಿದ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಗೆ KSHEMA(ಕ್ಷೇಮ) ಅಧಿಸೂಚಿತ ವಿಮಾ ಸಂಸ್ಥೆಯಾಗಿದೆ.

    ಹೆಚ್ಚಿನ ಮಾಹಿತಿಗೆ ದೇವನಹಳ್ಳಿ ತಾಲ್ಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು (ಜಿಪಂ)- 9480461234, ದೊಡ್ಡಬಳ್ಳಾಪುರ ತಾಲ್ಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು (ಜಿಪಂ)- 9880210892, ಹೊಸಕೋಟೆ ತಾಲ್ಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು (ಜಿಪಂ)- 8217210320, ನೆಲಮಂಗಲ ತಾಲ್ಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು (ಜಿಪಂ)- 9880461607, ರೈತ ಸಂಪರ್ಕ ಕೇಂದ್ರದ ಅಧಿಕಾರಿ, ಹತ್ತಿರದ ಬ್ಯಾಂಕ್ ಶಾಖೆ ಹಾಗೂ ವಿಮಾ ಕಂಪನಿಯ ಸಹಾಯವಾಣಿ ಸಂಖ್ಯೆ- 08026564537 ಈ ಸಂಖ್ಯೆಗಳಿಗೆ ಸಂಪರ್ಕಿಸಬಹುದೆಂದು ಜಿಲ್ಲಾ ತೋಟಗಾರಿಕಾ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

  • *ಹಿಂದುಳಿದ ವರ್ಗಗಳ ಮೆಟ್ರಿಕ್ ಪೂರ್ವ ವಿದ್ಯಾರ್ಥಿನಿಲಯಗಳ ಪ್ರವೇಶಕ್ಕೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನ*

    ಬೆಂಗಳೂರು ಗ್ರಾಮಾಂತರ ಜಿಲ್ಲೆ, ವಿಜಯಮಿತ್ರ :- ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳಲ್ಲಿ ಪ್ರವೇಶಕ್ಕಾಗಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪ.ಜಾ/ಪ.ವರ್ಗ ಮತ್ತು ಇತರೆ ಜನಾಂಗಗಳಿಗೆ ಸೇರಿದ ವಿದ್ಯಾರ್ಥಿಗಳಿಂದ 2024-25 ನೇ ಸಾಲಿಗೆ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

     

    ವಿದ್ಯಾರ್ಥಿಯ ಪೋಷಕರ ವಾರ್ಷಿಕ ಆದಾಯ ಮಿತಿ: ಪ್ರವರ್ಗ-1, ಎಸ್.ಸಿ & ಎಸ್.ಟಿ ರೂ. 1.00 ಲಕ್ಷ, ಪ್ರವರ್ಗ-2ಎ, 2ಬಿ, 3ಎ, 3ಬಿ, ಇತರೆ ಹಿಂದುಳಿದ ವರ್ಗ ಹಾಗೂ ಇತರೆ ರೂ. 44,500/- ಮಿತಿಯಲ್ಲಿ ಇರಬೇಕು.

    ವಿದ್ಯಾರ್ಥಿಗಳು ವೆಬ್ಸೈಟ್ https://shp.karnataka.gov.in/bcwd ನಲ್ಲಿ ಅರ್ಜಿಯನ್ನು ಸಲ್ಲಿಸಬೇಕು.

     

    ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಜುಲೈ 10 ಕೊನೆಯ ದಿನವಾಗಿದ್ದು.ತಾಲ್ಲೂಕುವಾರು ವಿದ್ಯಾರ್ಥಿನಿಲಯಗಳ ವಿವರ ಹಾಗೂ ವಿದ್ಯಾರ್ಥಿನಿಲಯದ ಪ್ರವೇಶಕ್ಕೆ ಇರಬೇಕಾದ ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳ ವಿವರ ಮತ್ತು ಸರ್ಕಾರದ ಆದೇಶಕ್ಕಾಗಿ ಇಲಾಖೆಯ ವೆಬ್ಸೈಟ್ https://bcwd.karnataka.gov.in/ ನ್ನು ನೋಡಬಹುದು.

     

    ಅರ್ಜಿ ಸಲ್ಲಿಸಲು ತಾಂತ್ರಿಕ ತೊಂದರೆಗಳಾದಲ್ಲಿ bcwdhelpline@gmail.com ಮುಖಾಂತರ ಅಥವಾ ಜಿಲ್ಲಾ/ತಾಲ್ಲೂಕು ಅಧಿಕಾರಿಗಳು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಇವರನ್ನು ಅಗತ್ಯ ದಾಖಲೆಗಳೊಂದಿಗೆ ಸಂಪರ್ಕಿಸುವುದು. ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ: 8050770004 ಮತ್ತು 8050770005 ಸಂಪರ್ಕಿಸಬಹುದೆಂದು ಬೆಂಗಳೂರು ಗ್ರಾಮಾಂತರ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

  • *ಮೋಟಾರ್ ರೀವೈಂಡಿಂಗ್ & ರಿಪೇರಿ ತರಬೇತಿ*

    ಬೆಂಗಳೂರು ಗ್ರಾಮಾಂತರ ಜಿಲ್ಲೆ, ವಿಜಯಮಿತ್ರ :- ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಟ್ರಸ್ಟ್ ಮತ್ತು ಕೆನರಾ ಬ್ಯಾಂಕ್ ಸಹಯೋಗದಲ್ಲಿ ನಡೆಸುತ್ತಿರುವ ರುಡ್ ಸೆಟ್ ಸಂಸ್ಥೆಯ ವತಿಯಿಂದ ಹಮ್ಮಿಕೊಂಡಿರುವ 30 ದಿನಗಳ ಮೋಟಾರ್ ರೀವೈಂಡಿಂಗ್ ಉಚಿತ ತರಬೇತಿಯು 10 ಜುಲೈ 2024 ರಿಂದ ಆಯೋಜಿಸಲಾಗಿದ್ದು, ಬೆಂಗಳೂರು ಗ್ರಾಮಾಂತರ, ರಾಮನಗರ ಹಾಗೂ ತುಮಕೂರು ಜಿಲ್ಲಾ ವ್ಯಾಪ್ತಿಯ ಗ್ರಾಮೀಣ ಆಸಕ್ತ ನಿರುದ್ಯೋಗಿ ಯುವಕರು ಅರ್ಜಿ ಸಲ್ಲಿಸಬಹುದಾಗಿದೆ.

     

    ಆಸಕ್ತ 18 ರಿಂದ 45 ರ್ಷನ ವಯೋಮಾನದವರಾಗಿದ್ದು, ಕನ್ನಡ ಭಾಷೆ ಓದಲು ಮತ್ತು ಬರೆಯಲು ಬಲ್ಲವರಾಗಿರಬೇಕು. ಗ್ರಾಮೀಣ ಪ್ರದೇಶದ ಆಧಾರ್ ಕಾರ್ಡ್ ಹಾಗೂ ಬಿಪಿಎಲ್ ಕಾರ್ಡ್ ಹೊಂದಿರುವವರಿಗೆ ಆದ್ಯತೆ ನೀಡಲಾಗುವುದು.

     

    ತರಬೇತಿಯು ವಸತಿಯುತವಾಗಿದ್ದು, ತರಬೇತಿಯ ಅವಧಿಯಲ್ಲಿ ಉಚಿತವಾಗಿ ಊಟ ಮತ್ತು ವಸತಿ ನೀಡಲಾಗುವುದು ಹಾಗೂ ತರಬೇತಿ ಪೂರ್ಣಗೊಂಡ ನಂತರ ಕೇಂದ್ರ ಸರ್ಕಾರದ ಗ್ರಾಮೀಣಾಭಿವೃದ್ಧಿ ಸಚಿವಾಲಯದಿಂದ ಪ್ರಮಾಣಪತ್ರವನ್ನು ವಿತರಿಸಲಾಗುವುದು. ಅರ್ಜಿ ಸಲ್ಲಿಸಲು 08 ಜುಲೈ ಕೊನೆಯ ದಿನವಾಗಿದೆ.

     

    ಆಸಕ್ತರು ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ರುಡ್ಸೆಟ್ ಸಂಸ್ಥೆ, ಅರಿಶಿನಕುಂಟೆ, ನೆಲಮಂಗಲ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ, ಮೊಬೈಲ್ ಸಂಖ್ಯೆ: 9241482541, 8884554510, 9113880324 ಅನ್ನು ಸಂಪರ್ಕಿಸಬಹುದಾಗಿದೆ ಎಂದು ರುಡ್ಸೆಟ್ ಸಂಸ್ಥೆಯ ಬೆಂಗಳೂರು ಶಾಖೆಯ ನಿರ್ದೇಶಕರಾದ ರವಿಕುಮಾರ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

  • **ತಾಲ್ಲೂಕು ಸಂಯೋಜಕರ ಹುದ್ದೆಗೆ ಅರ್ಜಿ ಆಹ್ವಾನ*

    ಬೆಂಗಳೂರು ಗ್ರಾಮಾಂತರ ಜಿಲ್ಲೆ, ವಿಜಯಮಿತ್ರ :- ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪೋಷಣ್ ಅಭಿಯಾನ ಯೋಜನೆಯಡಿಯಲ್ಲಿ ತಾಲ್ಲೂಕು ಮಟ್ಟದಲ್ಲಿ ಖಾಲಿ ಇರುವ ದೇವನಹಳ್ಳಿ ತಾಲ್ಲೂಕು ಸಂಯೋಜಕರು-01 ಹುದ್ದೆಯನ್ನು ನೇರ ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಿಕೊಳ್ಳಲು 21 ರಿಂದ 45 ವರ್ಷ ವಯೋಮಿತಿಯೊಳಗಿನ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

     

     

    ವಿದ್ಯಾರ್ಹತೆ ಮತ್ತು ಮಾನದಂಡ: ಪದವೀಧರರಾಗಿರಬೇಕು, ಕಂಪ್ಯೂಟರ್ ನಿರ್ವಹಣೆ / ತಂತ್ರಜ್ಞಾನದಲ್ಲಿ ಮತ್ತು ಸಾಫ್ಟ್ ವೇರ್ ಅಪ್ಲಿಕೇಷನ್ನಲ್ಲಿ ಕಾರ್ಯನಿರ್ವಹಿಸಿರುವ ಕನಿಷ್ಠ 02 ವರ್ಷಗಳ ಅನುಭವ ಹೊಂದಿರತಕ್ಕದ್ದು. ಸ್ಥಳೀಯ ಹಾಗೂ ಆಂಗ್ಲಭಾಷೆಯಲ್ಲಿ ಉತ್ತಮ ಸಂವಹನ ಹಾಗೂ ಬರೆಯುವ ಕೌಶಲ್ಯ ಹೊಂದಿರಬೇಕು. ಕಂಪ್ಯೂಟರ್ ಜ್ಞಾನದ ಜೊತೆಗೆ ಕಡ್ಡಾಯವಾಗಿ ಸ್ಥಳೀಯ ಅಭ್ಯರ್ಥಿಗಳಾಗಿರಬೇಕು.

    ಅರ್ಜಿ ಸಲ್ಲಿಸಲು ಕಡೆಯ ದಿನ ಜುಲೈ 15 ಸಂಜೆ 05:00 ಗಂಟೆಯೊಳಗಾಗಿ ಅಗತ್ಯ ದಾಖಲಾತಿಗಳೊಂದಿಗೆ ಕಛೇರಿಗೆ ಸಲ್ಲಿಸಬಹುದಾಗಿದೆ. ಕೊನೆಯ ದಿನಾಂಕದ ನಂತರ ಬಂದ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ.

     

    ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಅರ್ಜಿಗಳನ್ನು ಪಡೆಯಲು ಹಾಗೂ ಹೆಚ್ಚಿನ ಮಾಹಿತಿಗಾಗಿ ಉಪ ನಿರ್ದೇಶಕರ ಕಛೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕೊಠಡಿ ಸಂಖ್ಯೆ:206, 2ನೇಮಹಡಿ, ಜಿಲ್ಲಾಡಳಿತ ಭವನ, ಬೀರಸಂದ್ರ ಗ್ರಾಮ, ದೇವನಹಳ್ಳಿ ತಾ॥ ಬೆಂಗಳೂರು ಗ್ರಾಮಾಂತರ ಜಿಲ್ಲೆ, ದೂರವಾಣಿ ಸಂಖ್ಯೆ:080-29787445 ಇಲ್ಲಿಗೆ ಕಛೇರಿ ವೇಳೆಯಲ್ಲಿ ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

  • *ಡಿಪ್ಲೊಮಾ ಕೋಸ್೯ಗಳ ಪ್ರವೇಶಾತಿಗೆ ಬಾಕಿ ಉಳಿದಿರುವ ಸೀಟುಗಳಿಗೆ ಅರ್ಜಿ ಆಹ್ವಾನ*

    ಬೆಂಗಳೂರು ಗ್ರಾಮಾಂತರ ಜಿಲ್ಲೆ,ವಿಜಯಮಿತ್ರ :- ದೇವನಹಳ್ಳಿ ತಾಲ್ಲೂಕು ಚನ್ನರಾಯಪ್ಪಟಣದಲ್ಲಿರುವ ಸರ್ಕಾರಿ ಉಪಕರಣಾಗಾರ ಮತ್ತು ತರಭೇತಿ ಕೇಂದ್ರವು ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ ಅಡಿಯಲ್ಲಿ ಕಾರ್ಯ ನಿರ್ವಹಿಸುತ್ತಿದೆ. ಈ ದೇವನಹಳ್ಳಿ ಜಿ.ಟಿ.ಟಿ.ಸಿ. ಕೇಂದ್ರದಲ್ಲಿ 2024-25 ನೇ ಶೈಕ್ಷಣಿಕ ಸಾಲಿನ ಡಿಪ್ಲೋಮಾ ಕೋರ್ಸ್ಗಳ ದಾಖಲಾತಿ ಪ್ರಕ್ರಿಯೆಯು ಪ್ರಾರಂಭವಾಗಿದ್ದು, ಡಿಪ್ಲೊಮಾ ಕೋರ್ಸ್ಗಳ ಪ್ರವೇಶಾತಿಗೆ, ಸಂಬಂಧಿಸಿದಂತೆ, ಬಾಕಿ ಉಳಿದಿರುವ ಸೀಟುಗಳಿಗೆ ಅರ್ಜಿ ಆಹ್ವಾನಿಸಲಾಗಿದ್ದು ಜುಲೈ 15 ಕೊನೆಯ ದಿನವಾಗಿದೆ.

     

    ಈ ಕೇಂದ್ರದಲ್ಲಿ ಡಿಪ್ಲೋಮಾ ಇನ್ ಟೂಲ್ & ಡೈಮೇಕಿಂಗ್ (DTDM), ಡಿಪ್ಲೋಮಾ ಇನ್ ಮೆಕಾಟ್ರಾನಿಕ್ಸ್ (DMCH), ಡಿಪ್ಲೋಮಾ ಇನ್ ಎಲೆಕ್ನಿಕಲ್ & ಎಲೆಕ್ಟ್ರಾನಿಕ್ಸ್ ಇಂಜಿನಿಯರಿಂಗ್ (DEEE), ಡಿಪ್ಲೋಮಾ ಇನ್ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ & ಮಿಷೀನ್ ಲರ್ನಿಂಗ್ (DAI & ML) ಈ 04 ವಿಭಾಗದ ಡಿಪ್ಲೋಮಾ ಕೋರ್ಸ್ ಗಳಿಗೆ ಎಸ್.ಎಸ್.ಎಲ್.ಸಿ. ಅಥವಾ ತತ್ಸಮಾನ ಪರೀಕ್ಷೆ ಉತೀರ್ಣರಾದವರು ಅರ್ಹರಿರುತಾರೆ. ಈ ಡಿಪ್ಲೋಮಾ ಕೋರ್ಸ್ ಗಳ ಅವಧಿ 3+1 ವರ್ಷ (ಕಡ್ಡಾಯ ಒಂದು ವರ್ಷದ ಸ್ಟೈಫಂಡ್ ಸಹಿತ ಇಂಟರ್ನ್ ಶಿಪ್ ತರಬೇತಿ). ಈ ಕೇಂದ್ರದಲ್ಲಿ ಎಸ್ಸೆಸ್ಸೆಲ್ಸಿ, ಪಿಯುಸಿ ಮತ್ತು ಐಟಿಐ ಪಾಸಾದ ವಿದ್ಯಾರ್ಥಿಗಳು ಡಿಪ್ಲೋಮಾ ತರಬೇತಿಗಳಿಗೆ ದಾಖಲಾತಿ ಪಡೆಯಬಹುದಾಗಿದೆ.

     

    ಹೆಚ್ಚಿನ ಮಾಹಿತಿಗಾಗಿ 080-26607666, 9036144417, 9242952017, 9980956422 ಅಥವಾ ಜಿಟಿಟಿಸಿ ದೇವನಹಳ್ಳಿ ಕಾಲೇಜಿಗೆ ಖುದ್ದಾಗಿ ಭೇಟಿ ನೀಡಿ ಮಾಹಿತಿ ಪಡೆದುಕೊಳ್ಳಬಹುದು ಹಾಗು ಅರ್ಜಿ ಸಲ್ಲಿಸಲು ಕಾಲೇಜಿಗೆ ಭೇಟಿ ನೀಡಬಹುದು ಎಂದು ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ ದೇವನಹಳ್ಳಿ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

  • *ದೊಡ್ಡಬಳ್ಳಾಪುರ l ನಗರದಲ್ಲಿ ಮೂರು ದಿನಗಳ ಬೃಹತ್ ಕೇಸರಿ ಹಬ್ಬ : ಶ್ರೀ ರಾಮ ಶೋಭಯಾತ್ರೆಗೆ ಭರ್ಜರಿ ಸಿದ್ಧತೆ*

    ದೊಡ್ಡಬಳ್ಳಾಪುರ : ನಗರದಲ್ಲಿ ಮೂರು ದಿನಗಳ “ಬೃಹತ್ ಕೇಸರಿ ಹಬ್ಬ “ವನ್ನು ವಿಶ್ವ ಹಿಂದು ಪರಿಷದ್ ಬಜರಂಗದಳ ದೊಡ್ಡಬಳ್ಳಾಪುರ ಪ್ರಖಂಡದ ವತಿಯಿಂದ ಆಯೋಜನೆ ಮಾಡಲಾಗಿದೆ.

    ಜೂನ್ 29 ರಂದು ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ಮಹಾ ಸುದರ್ಶನ ಹೋಮ. ಶ್ರೀರಾಮ ತಾರಕ ಹೋಮ, ಶ್ರೀ ಮಹಾಗಣಪತಿ ಹೋಮ, ಶ್ರೀ ನವಗ್ರಹಶಾಂತಿ ಹೋಮ, ಶ್ರೀ ಮೃತ್ಯುಂಜಯ ಶಾಂತಿ ಹೋಮ, ಶ್ರೀ ಮಹಾಗ್ರಾಮದೇವತೆ ಶಾಂತಿ ಹೋಮ ಶ್ರೀ ಮಹಾಪೂರ್ಣಾಹುತಿ ಹೋಮ ನೆಡೆಯಿತು ಹಾಗೂ ಮತ್ತು ಮಧ್ಯಾಹ್ನ ಮಧ್ಯಾಹ್ನ ನೂರಾರು ಮಹಿಳೆಯರಿಂದ ‘ಲಲಿತ ಸಹಸ್ರನಾಮ ಮತ್ತು ಹನುಮಾನ್ ಚಾಲೀಸ್’ ಸಾಮೂಹಿಕ ಪಠಣ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಯಿತು.ಸಂಜೆ “ಕಲ್ಯಾಣೋತ್ಸವ” ಹಾಗೂ ರಾತ್ರಿ ಮಹಾಮಂಗಳಾರತಿ ಸೇರಿದಂತೆ ಮಾತೆಯರಿಂದ ಗೋ ಆರತಿ ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿತ್ತು.

     

    ಇಂದು (ಜೂನ್ 30)ಬೃಹತ್ ಶ್ರೀರಾಮ ಶೋಭಾಯಾತ್ರೆ ನಡೆಯಲಿದ್ದು, ಯಾವುದೇ ರೀತಿಯ ಅಹಿತಕರ ಘಟನೆಗಳು ನಡೆಯದಂತೆ ಎಚ್ಚರಿಕೆ ವಹಿಸಲಾಗಿದೆ.

    ನಗರದ ಪ್ರಮುಖ ರಸ್ತೆಗಳ ಮೂಲ ಶೋಭಾಯಾತ್ರೆ ಮೆರವಣಿಗೆ ಸಾಗಲಿದ್ದು, ಮೆರವಣಿಗೆಯಲ್ಲಿ ಡಿಜೆ ಸಂಗೀತ ಸೇರಿದಂತೆ ಸಾಂಸ್ಕೃತಿಕ ಕಲಾ ತಂಡಗಳ ಮೆರವಣಿಗೆ ನಡೆಯಲಿದೆ, ಮಧ್ಯಾಹ್ನ 1 ಗಂಟೆ ಸುಮಾರಿಗೆ ನಗರದ ಭಗತ್ ಸಿಂಗ್ ಕ್ರೀಡಾಂಗಣದಿಂದ ಹೊರಡುವ ಶೋಭಾಯಾತ್ರೆ ತಾಲೂಕು ಕಚೇರಿ ಮೂಲಕ ಹೊರಟು ಬಸ್ ನಿಲ್ದಾಣಕ್ಕೆ ತಲುಪಿ ಅಲ್ಲಿಂದ ಲಕ್ಷ್ಮೀ ಟಾಕಿಸ್ ಮಾರ್ಗವಾಗಿ ತೇರಿನಬೀದಿ ಸರ್ಕಲ್, ಹಳೇ ಮಾರ್ಕೆಟ್ ಶಾಲೆ,ಕಾಳಮ್ಮ ದೇವಸ್ಥಾನ, ಅಂಜಿನಪ್ಪ ಸಿಲ್ಕ್ ಹೌಸ್, ಕಲ್ಲುಪೇಟೆ, ಸ್ವಾಮಿ ವಿವೇಕಾನಂದ ಮಾರ್ಗವಾಗಿ ಭಗತ್ ಸಿಂಗ್ ಕ್ರೀಡಾಂಗಣಕ್ಕೆ ಬರಲಿದೆ. ಬೃಹತ್ ಶೋಭಾಯಾತ್ರೆ ಕಾರ್ಯಕ್ರಮದಲ್ಲಿ ಯಾವುದೇ ರೀತಿಯ ಅಹಿತಕ ಘಟನೆಗಳು ನಡೆಯದಂತೆ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.

     

    ಕಾರ್ಯಕ್ರಮದಲ್ಲಿ ಕಟ್ಟರ್ ಹಿಂದೂ ವಾಗ್ನಿ ಶ್ರೀಕಾಂತ್‌ಶೆಟ್ಟಿ ಕಾರ್ಕಳ ದಿಕ್ಕೂಚಿ ಭಾಷಣವನ್ನು ಮಾಡಲಿದ್ದಾರೆ ಹಾಗೂ ನಗರದ ಪ್ರಮುಖ ರಸ್ತೆಗಳಲ್ಲಿ ಭಾರತ ಮಾತೆ, ತಾಯಿ ಭುವನೇಶ್ವರಿದೇವಿ, ಶ್ರೀರಾಮ, ಹನುಮ.ಶಿವ ಪ್ರತಿಮೆಗಳನ್ನು, ವಿವಿಧ ವಾದ್ಯಗಳ ತಂಡಗಳೊಂದಿಗೆ ಭವ್ಯ ಮೆರವಣಿಗೆ ಮಾಡಲಾಗುತ್ತದೆ ಎಂದು ವಿಶ್ವ ಹಿಂದು ಪರಿಷದ್ ಬಜರಂಗದಳ ದೊಡ್ಡಬಳ್ಳಾಪುರ ಪ್ರಖಂಡ ಪ್ರಮುಖರು ತಿಳಿಸಿದ್ದಾರೆ.

     

     

    ವಿಶೇಷ ಕಾರ್ಯಕ್ರಮ

    ಶೋಭಾ ಯಾತ್ರೆಯ ನಂತರ ಲೇಸರ್ ಶೋ, ಬೃಹತ್ ರಾವಣ ದಹನ ಮತ್ತು ಆಕರ್ಷಕ ಸಿಡಿ ಮದ್ದು ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ.

  • *SC/ST ಜನರ ಮೇಲಿನ ದೌರ್ಜನ್ಯ ಪ್ರಕರಣಗಳು ಕಂಡುಬಂದಲ್ಲಿ ಶೀಘ್ರ ಕ್ರಮ ಕೈಗೊಳ್ಳಿ:ಜಿಲ್ಲಾಧಿಕಾರಿ ಡಾ.ಎನ್.ಶಿವಶಂಕರ್*

    ಬೆಂಗಳೂರು ಗ್ರಾಮಾಂತರ ಜಿಲ್ಲೆ, ಜೂನ್ 29(ವಿಜಯಮಿತ್ರ ): ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಜನರ ಮೇಲಿನ ದೌರ್ಜನ್ಯ ಪ್ರಕರಣಗಳು ಕಂಡುಬಂದಲ್ಲಿ ವಿಳಂಬ ಮಾಡದೆ ಕೂಡಲೇ ಸಂಭಂದಿಸಿದ ಅಧಿಕಾರಿಗಳು ಕ್ರಮ ಕೈಗೊಳ್ಳಿ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಡಾ.ಎನ್ ಶಿವಶಂಕರ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

     

    ದೇವನಹಳ್ಳಿ ತಾಲ್ಲೂಕಿನ ಬೀರಸಂದ್ರ ಗ್ರಾಮದ ಬೆಂಗಳೂರು ಗ್ರಾಮಾಂತರ ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ನಡೆದ 2024ನೇ ಕ್ಯಾಲೆಂಡರ್ ವರ್ಷದ 2ನೇ ತ್ರೈಮಾಸಿಕ ಜಿಲ್ಲಾ ಮಟ್ಟದ ಜಾಗೃತಿ ಉಸ್ತುವಾರಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಜಿಲ್ಲೆಯಲ್ಲಿ ಯಾವುದೇ ರೀತಿಯ ದೌರ್ಜನ್ಯ ಪ್ರಕರಣಗಳು ಕಂಡುಬಂದಲ್ಲಿ ಶೀಘ್ರವಾಗಿ ಪ್ರಕರಣ ದಾಖಲಿಸಿ ಅದರ ವಿರುದ್ಧ ಕ್ರಮ ಕೈಗೊಂಡು, ಮುನ್ನೆಚ್ಚರಿಕಾ ಕ್ರಮವಾಗಿ ಇಂತಹ ಘಟನೆಗಳು ಸಂಭವಿಸದಂತೆ ಅಧಿಕಾರಿಗಳು ಎಚ್ಚರವಹಿಸಲು ಸೂಚನೆ ನೀಡಿದರು.

     

    ಎಲ್ಲಾ ತಾಲ್ಲೂಕುಗಳಲ್ಲಿ ತಾಲ್ಲೂಕು ಮಟ್ಟದ ಕುಂದು ಕೊರತೆ ಸಭೆಯನ್ನು ಪ್ರತಿ 3 ತಿಂಗಳಿಗೊಮ್ಮೆ ವರ್ಷದಲ್ಲಿ ಒಟ್ಟು 4 ಸಭೆಗಳನ್ನು ನಡೆಸಬೇಕಾಗಿದ್ದು, 2024ನೇ ಕ್ಯಾಲೆಂಡರ್ ವರ್ಷಕ್ಕೆ ಸಂಬಂಧಿಸಿದಂತೆ ಬಾಕಿ ಉಳಿದಿರುವ ಸಭೆಗಳನ್ನು ಶೀಘ್ರವಾಗಿ ನಡೆಸಿ ಎಂದು ಹೇಳಿದರು.

     

    ಉಪವಿಭಾಗದ ಮಟ್ಟದ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸಭೆಗಳನ್ನು ಕಡ್ಡಾಯವಾಗಿ ಮೂರು ತಿಂಗಳಿಗೊಮ್ಮೆ ವರ್ಷದಲ್ಲಿ ಒಟ್ಟು ನಾಲ್ಕು ಸಭೆಗಳನ್ನು ನಡೆಸಬೇಕಾಗಿರುತ್ತದೆ, ಈಗಾಗಲೇ ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಒಂದು ಸಭೆಯನ್ನು ನಡೆಸಲಾಗಿದ್ದು, ಇನ್ನು ಬಾಕಿ ಇರುವ 3 ಸಭೆಗಳು ನಡೆಸಲು ಸೂಚಿಸಿದರು.

     

    ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಮೇಲಿನ ದೌರ್ಜನ್ಯ ಕಾಯ್ದೆಯಲ್ಲಿ ಪ್ರಕರಣಗಳು ದಾಖಲಾದ ಕೂಡಲೇ ಪ್ರಥಮ ವರ್ತಮಾನ ವರದಿ ಆಧಾರದ ಮೇಲೆ ಪರಿಹಾರ ಧರವನ್ನು ಮಂಜೂರು ಮಾಡಬೇಕಾಗಿರುವುದರಿಂದ ಪ್ರಥಮ ವರ್ತಮಾನ ವರದಿ ಹಾಗೂ ಇತರ ದಾಖಲಾತಿಗಳನ್ನು ಜಿಲ್ಲಾ ತಾಲೂಕು ಕಚೇರಿಗಳಿಗೆ ಇ-ಮೇಲ್ ಮೂಲಕ ಕಳುಹಿಸಲು‌ ತಿಳಿಸಿದರು.

     

    ದೌರ್ಜನ್ಯ ಪ್ರಕರಣಗಳ ದಾಖಲು, ಪರಿಹಾರ ಧನದ ಮಂಜೂರಾತಿ ವಿವರಗಳ ಪರಿಶೀಲನೆ ನಡೆಸಿದ ಅವರು ದಿನಾಂಕ ಜನವರಿ ಮಾಹೆಯಿಂದ ದಿನಾಂಕ ಜೂನ್ ಮಾಹೆಯ ವರೆಗೆ ಒಟ್ಟು 41 ಜನ ಸಂತ್ರಸ್ತರಿಗೆ ಒಟ್ಟು ರೂ. 30,62,500 ಗಳ ಪರಿಹಾರ ಧನವನ್ನು ಮಂಜೂರು ಮಾಡಲಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಮಾಹಿತಿ ನೀಡಿದರು.

     

    ಜಿಲ್ಲೆಯ ಎಲ್ಲಾ ಪೊಲೀಸ್ ಠಾಣೆಗಳಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಮೇಲಿನ ದೌರ್ಜನ್ಯ ಕಾಯ್ದೆ ಅಡಿಯಲ್ಲಿ ದಾಖಲಾದ ಪ್ರಕರಣಗಳಲ್ಲಿ ತನಿಖೆಯನ್ನು ಪೂರ್ಣಗೊಳಿಸುವ ಚಾರ್ಜ್ ಶೀಟ್ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ಒಳ್ಳೆಯ ಪ್ರಗತಿ ಇದೆ ಎಂದು ಹೇಳಿದರು.

     

    ಜಿಲ್ಲೆಯಲ್ಲಿ ದೌರ್ಜನ್ಯ ಪ್ರಕರಣಗಳು ಹಾಗೂ ಗಲಭೆ/ಗುಂಪು ಗಲಭೆಗಳು ಹೆಚ್ಚಾಗಿ ಕಂಡುಬಂದ ಹಳ್ಳಿಗಳನ್ನು ಗುರುತಿಸಿ ತಹಶೀಲ್ದಾರ್ ಅವರ ಅಧ್ಯಕ್ಷತೆಯಲ್ಲಿ ಶಾಂತಿಸಭೆ ನಡೆಸಲು ನಿರ್ದೇಶನ‌ ನೀಡಿದರು.

     

    ಪೊಲೀಸ್ ಠಾಣೆಗಳಲ್ಲಿ ನಡೆಯುವ ಕುಂದು ಕೊರತೆ ಸಭೆಗಳಿಗೆ ಜಿಲ್ಲಾ ಜಾಗೃತಿ ಮತ್ತು ಉಸ್ತುವಾರಿ ಸಮಿತಿ ಸದಸ್ಯರನ್ನು ಆಹ್ವಾನಿಸಿದ ಮಾಹಿತಿಯನ್ನು ಸಂಬಂಧಪಟ್ಟ ಅಧಿಕಾರಿಗಳ ಬಳಿ ಪಡೆದುಕೊಂಡರು.

     

    ಮಾರ್ಚ್ 16 ರಿಂದ ಜೂನ್ 27 ರ ವರೆಗೆ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದ ದೌರ್ಜನ್ಯ ಕಾಯ್ದೆ 1989 ರನ್ವಯ ದೌರ್ಜನ್ಯದಲ್ಲಿ ನೊಂದ ಸಂತ್ರಸ್ತರಿಗೆ ಮಂಜೂರು ಮಾಡಿದ ಪರಿಹಾರ ಒಟ್ಟು ಮೊತ್ತ ರೂ.18,94,958 ಆಗಿರುತ್ತದೆ.

     

    ಜನವರಿ ಮಾಹೆಯಿಂದ ಮೇ ಮಾಹೆಯ ವರೆಗೆ ಜಿಲ್ಲೆಯಲ್ಲಿ ದಾಖಲಾದ ದೌರ್ಜನ್ಯ ಪ್ರಕರಣಗಳ ಸಂಖ್ಯೆ 34 ಆಗಿದೆ‌. ಪರಿಹಾರಕ್ಕೆ ಮಂಜೂರು ಮಾಡಿದ ಒಟ್ಟು ಮೊತ್ತ ರೂ‌.30,62,500 ಗಳನ್ನು ಒದಗಿಸಲಾಗಿದೆ ಎಂದು ಅವರು ಹೇಳಿದರು.

     

    ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಕೆ.ಎನ್ ಅನುರಾಧ, ಹೆಚ್ಚುವರಿ ಜಿಲ್ಲಾ ವರಿಷ್ಠಾಧಿಕಾರಿ ನಾಗಾರಜು, ಉಪ ವಿಭಾಗಾಧಿಕಾರಿ ಶ್ರೀನಿವಾಸ್, ದೊಡ್ಡಬಳ್ಳಾಪುರ ತಾಲ್ಲೂಕು ತಹಶೀಲ್ದಾರ್ ವಿದ್ಯಾ ವಿಭಾ ರಾಥೋಡ್, ಹೊಸಕೋಟೆ ತಾಲ್ಲೂಕು ತಹಶೀಲ್ದಾರ್ ವಿಜಯ ಕುಮಾರ್, ನಾಲ್ಕು ತಾಲ್ಲೂಕು ಡಿವೈಎಸ್ಪಿ ಅಧಿಕಾರಿಗಳು, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಪ್ರೇಮಾ ಟಿ.ಎಲ್‌.ಎಸ್ , ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳು ಹಾಗೂ ಸಮಿತಿ ಸದಸ್ಯರು ಉಪಸ್ಥಿತರಿದ್ದರು.

  • *ರಾಷ್ಟ್ರಮಟ್ಟದ ಅತ್ಯುತ್ತಮ ಗುಣಮಟ್ಟದ ಪ್ರಶಸ್ತಿ ( NQAS) ಪಡೆದ ದೊಡ್ಡಬಳ್ಳಾಪುರ ಸಾರ್ವಜನಿಕ ಆಸ್ಪತ್ರೆ*

    ದೊಡ್ಡಬಳ್ಳಾಪುರ.ವಿಜಯಮಿತ್ರ :ಕೇಂದ್ರ ಸರ್ಕಾರದ ಆರೋಗ್ಯ ಇಲಾಖೆಯಿಂದ ಕೊಡಮಾಡುವ ರೋಗಿಗಳಿಗೆ ಅತ್ಯುತ್ತಮ ಗುಣಮಟ್ಟದ ಚಿಕಿತ್ಸೆ ನೀಡುವ ಅಂದರೆ ನ್ಯಾಷನಲ್ ಕ್ವಾಲಿಟಿ ಅಶುರೆನ್ಸ್ ಸ್ಟಾಂಡರ್ಸ್ ( NQAS) ರಾಷ್ಟ್ರ ಮಟ್ಟದ ಪ್ರಶಸ್ತಿಯನ್ನು ದೊಡ್ಡಬಳ್ಳಾಪುರದ ತಾಯಿ-ಮಗು ಆಸ್ಪತ್ರೆ( ಸಾರ್ವಜನಿಕ ಆಸ್ಪತ್ರೆ) ಸಿಬ್ಬಂದಿ ಪಡೆಯುವ ಮೂಲಕ ತಾಲ್ಲೂಕಿನ ಹೆಮ್ಮೆ ಹೆಚ್ಚಿಸಿದ್ದಾರೆ.

     

    ರೋಗಿಗಳಿಗೆ ಚಿಕಿತ್ಸೆ ನೀಡುವಾಗ ನಿಗದಿತ ಮಾರ್ಗಸೂಚಿಗಳನ್ನು ಅನುಪಾಲನೆ ಮಾಡುವುದು, ದಾಖಲೆಗಳನ್ನು ನಿರ್ವಹಿಸುವುದು, ವರದಿ ಸಲ್ಲಿಸುವುದು, ಸೂಕ್ತ ಸಮಯದಲ್ಲಿ ರೆಫರ್ ಮಾಡುವುದು ಮುಂತಾದ ಅಂಶಗಳನ್ನು ಆಧರಿಸಿ ರಾಜ್ಯ ಮಟ್ಟದ ತಂಡವು ಸರ್ಕಾರಿ ಆಸ್ಪತ್ರೆಗೆ ಭೇಟಿ ನೀಡಿ ಆಂತರಿಕ ಮೌಲ್ಯ ಮಾಪನ ಮಾಡುವ ಮೂಲಕ ಈ ಪ್ರಶಸ್ತಿ ನೀಡಲಾಗುವುದು..

     

    ಇಂದು (ಜೂನ್. 28) ದೆಹಲಿಯ ವಿಜ್ಞಾನ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೇಂದ್ರ ಆರೋಗ್ಯ ಸಚಿವಾಲಯದ ರಾಜ್ಯ ಸಚಿವ ಪ್ರತಾಪ್‌ ರಾವ್‌ ಗಣಪತ್ ರಾವ್ ಜಾದವ್ ಹಾಗೂ ಅನುಪ್ರಿಯ ಪಾಟೀಲ್ ಅವರು ಪ್ರಶಸ್ತಿ ಪ್ರಧಾನ ಮಾಡಿದರು.

     

    ಆಸ್ಪತ್ರೆಯ ಆಡಳಿತಾಧಿಕಾರಿ ಡಾ.ರಮೇಶ್, ಡಾ.ಮಂಜುನಾಥ್ ಸಿಸ್ಟ‌ರ್ ಭವ್ಯ ಪ್ರಶಸ್ತಿಯನ್ನು ಸ್ವೀಕರಿಸಿದರು.

     

    ರಾಜ್ಯದಿಂದ ಪ್ರಶಸ್ತಿಗೆ ಆಯ್ಕೆಯಾದ ಉಳಿದ ಆಸ್ಪತ್ರೆಗಳು:

    ಶಿವಮೊಗ್ಗದ ಜಿಲ್ಲಾಸ್ಪತ್ರೆ ಮೆಗ್ಗಾನ್.ಯುಸಿಎಚ್.ಸಿ ಶ್ರೀರಾಮಪುರಂ ಎಎಎಂ ತೋರದೇವನದಹಳ್ಳಿ.

  • *ಜೂನ್ 29 ರಂದು ಜಿಲ್ಲಾಡಳಿತ ಭವನದಲ್ಲಿ ನಾಡಪ್ರಭು ಶ್ರೀ ಕೆಂಪೇಗೌಡರ 515ನೇ ಜಯಂತ್ಯೋತ್ಸವ*

    ಬೆಂಗಳೂರು ಗ್ರಾಮಾಂತರ ಜಿಲ್ಲೆ ಜೂನ್ 28 (ವಿಜಯಮಿತ್ರ ): ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ವತಿಯಿಂದ ನಾಡಪ್ರಭು ಶ್ರೀ ಕೆಂಪೇಗೌಡರ 515ನೇ ಜಯಂತ್ಯೋತ್ಸವ ಕಾರ್ಯಕ್ರಮವನ್ನು ಜೂನ್ 29(ಶನಿವಾರ) ರಂದು ಬೆಳಗ್ಗೆ 10.30 ಗಂಟೆಗೆ ದೇವನಹಳ್ಳಿ ತಾಲ್ಲೂಕಿನ ಬೀರಸಂದ್ರ ಗ್ರಾಮದ ಜಿಲ್ಲಾಡಳಿತ ಭವನದ ಆಡಿಟೋರಿಯಂ ಸಭಾಂಗಣದಲ್ಲಿ ಕಾರ್ಯಕ್ರಮ ಏರ್ಪಡಿಸಲಾಗಿದೆ.

     

    ಕಾರ್ಯಕ್ರಮದ ಅಧ್ಯಕ್ಷತೆ ಹಾಗೂ ಉದ್ಘಾಟನೆಯನ್ನು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್.ಮುನಿಯಪ್ಪ ವಹಿಸಲಿದ್ದಾರೆ.

     

    ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕ್ರತಿ ಇಲಾಖೆ ಸಚಿವರಾದ ಶಿವರಾಜ್ ಎಸ್ ತಂಗಡಗಿ, ಕರ್ನಾಟಕ ಸರ್ಕಾರದ 5ನೇ ಹಣಕಾಸು ಆಯೋಗದ ಅಧ್ಯಕ್ಷರಾದ ಸಿ.ನಾರಾಯಣಸ್ವಾಮಿ, ಕರ್ನಾಟಕ ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮ ನಿಯಮಿತ ಅಧ್ಯಕ್ಷರು ಹಾಗೂ ಹೊಸಕೋಟೆ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಶರತ್ ಕುಮಾರ್ ಬಚ್ಚೇಗೌಡ ಅವರ ಘನ ಉಪಸ್ಥಿತಿಯಲ್ಲಿ, ಮುಖ್ಯ ಅತಿಥಿಗಳಾಗಿ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದ ಸಂಸದರಾದ ಡಾ.ಕೆ.ಸುಧಾಕರ್, ದೊಡ್ಡಬಳ್ಳಾಪುರ ಶಾಸಕ ಧೀರಜ್ ಮುನಿರಾಜು, ನೆಲಮಂಗಲ ಶಾಸಕ ಎನ್.ಶ್ರೀನಿವಾಸ್, ವಿಧಾನ ಪರಿಷತ್ ಸದಸ್ಯರುಗಳಾದ ಎಸ್.ರವಿ, ಪುಟ್ಟಣ್ಣ, ಎನ್.ನಾಗರಾಜು(ಎಂ.ಟಿ.ಬಿ), ರಾಮೋಜಿಗೌಡ, ಪ್ರವಾಸೋದ್ಯಮ ಕಾರ್ಯದರ್ಶಿ, ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತ್ ಆಡಳಿತಾಧಿಕಾರಿ

    ಮತ್ತು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಸಲ್ಮಾಕೆ.ಫಾಹಿಂ, ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಪ್ರದೇಶ ಯೋಜನಾ ಪ್ರಾಧಿಕಾರದ(ಬಯಪ) ಅಧ್ಯಕ್ಷರಾದ ಶಾಂತಕುಮಾರ್,

    ಉಪನಗರ ವರ್ತುಲ ರಸ್ತೆ ಯೋಜನಾ ಪ್ರಾಧಿಕಾರದ ಅಧ್ಯಕ್ಷರಾದ ವಿಜಯ ಮುಳಗುಂದು, ಅಲೂರು ದುದ್ದನಹಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಜಯಲಕ್ಷ್ಮಮ್ಮ ಉಪಸ್ಥಿತರಿರುತ್ತಾರೆ.

    ವಿಶೇಷ ಆಹ್ವಾನಿತರಾಗಿ ದೇವನಹಳ್ಳಿ ತಾಲ್ಲೂಕು ಒಕ್ಕಲಿಗರ ಸಂಘದ ಅಧ್ಯಕ್ಷರು ಕೆ.ಸಿ ವೆಂಕಟೇಗೌಡ, ದೇವನಹಳ್ಳಿ ತಾಲ್ಲೂಕು ಒಕ್ಕಲಿಗರ ಸಂಘದ ಕಾರ್ಯದರ್ಶಿಗಳಾ ಮುನಿರಾಜು ಉಪಸ್ಥಿತರಿರುತ್ತಾರೆ.

     

    ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಪ್ರೋ ಬಿ‌.ಎನ್.ಕೃಷ್ಣಪ್ಪ ಅವರು ವಿಶೇಷ ಉಪನ್ಯಾಸ ನೀಡಲಿದ್ದಾರೆ.

     

    ಕಾರ್ಯಕ್ರಮದಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿಗಳಾದ ಡಾ.ಎನ್ ಶಿವಶಂಕರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಕೆ.ಎನ್.ಅನುರಾಧ, ಜಿಲ್ಲಾ ಪೊಲೀಸ್ ಅಧೀಕ್ಷಕರು ಮಲ್ಲಿಕಾರ್ಜುನ ಬಾಲದಂಡಿ, ದೇವನಹಳ್ಳಿ ತಾಲ್ಲೂಕು ತಹಶೀಲ್ದಾರ್ ಶಿವರಾಜ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕರಾದ ರವಿಕುಮಾರ್ ಡಿ.ಎಂ ಸೇರಿದಂತೆ ಜಿಲ್ಲೆಯ ಎಲ್ಲಾ ಚುನಾಯಿತ ಪ್ರತಿನಿಧಿಗಳು, ನಾಮ ನಿರ್ದೇಶಿತ ಸದಸ್ಯರು ಸಮುದಾಯದ ಮುಖಂಡರುಗಳು, ಮಾಧ್ಯಮ ಮತ್ತು ಪತ್ರಿಕಾ ಪ್ರತಿನಿಧಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿರುತ್ತಾರೆ.